ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

From Wikipedia

ಯುಗಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ

ಹೊಂಗೆ ಹೂವ ತೊಂಗಲಲ್ಲಿ
ಭೃಂಗದ ಸಂಗೀತ ಕೇಲಿ
ಮತ್ತೆ ಕೇಳಬರುತಿದೆ
ಬೇವಿನ ಕಹಿ ಬಾಳಿನಲ್ಲಿ
ಹೂವಿನ ನಸುಗಂಪು ಸೂಸಿ
ಜೀವಕಳೆಯ ತರುತಿದೆ

ಕಮ್ಮನೆ ಬಾಣಕ್ಕೆ ಸೋತು
ಜುಮ್ಮನೆ ಮಾಮರವು ಹೂತು
ಕಾಮಗಾಗಿ ಕಾದಿದೆ
ಸುಗ್ಗಿ ಸುಗ್ಗಿ ಸುಗ್ಗಿ ಎಂದು
ಹಿಗ್ಗಿ ಗಿಳಿಯ ಸಾಲು ಸಾಲು
ತೋರಣದೊಲು ಕೋದಿದೆ

ವರುಷಕೊಮ್ಮೆ ಹೊಸತು ಜನ್ಮ
ಹರುಷಕೊಂದು ಹೊಸತು ನೆಲೆಯು
ಅಖಿಲ ಜೀವಜಾತಕೆ!
ಒಂದೆ ಒಂದು ಜನ್ಮದಲ್ಲಿ
ಒಂದೆ ಬಾಲ್ಯ ಒಂದೆ ಹರೆಯ
ನಮಗದಷ್ಟೆ ಏತಕೆ?

ನಿದ್ದೆಗೊಮ್ಮೆ ನಿತ್ಯ ಮರಣ
ಎದ್ದ ಸಲ ನವೀನ ಜನನ
ನಮಗೆ ಏಕೆ ಬಾರದೋ
ಎಲೆ ಸನತ್ಕುಮಾರದೇವ!
ಸಲೆ ಸಾಹಸಿ ಚಿರಂಜೀವ!
ನಿನಗೆ ಲೀಲೆ ಸೇರದೋ?

ಯುಗಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ.
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ
ನಮ್ಮನಷ್ಟೆ ಮರೆತಿದೆ!

(ಅಂಬಿಕಾತನಯದತ್ತರ ಕವನಸಂಕಲನ "ಗರಿ"ಯಲ್ಲಿ ಈ ಮೇಲಿನ ಕವಿತೆ ಪ್ರಕಟಿತವಾಗಿದೆ)